ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕೆ ಸಂಬoಧಿಸಿದoತೆ ರಾಜ್ಯ ಸರ್ಕಾರದ ನೀತಿಯಲ್ಲಿ ಗೊಂದಲ ಕಂಡು ಬಂದಿದೆ. ಆಗಸ್ಟ್ 15ರ ನಂತರ ಕೊರೊನಾ ಕಂಟ್ರೋಲ್ ಮಾಡಲು ಮತ್ತಷ್ಟು ಕಠಿಣ ನಿಯಮಗಳನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಶಾಲಾ-ಕಾಲೇಜು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿ ಆದೇಶ ಮಾಡಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.
ಶೇಕಡಾ 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ9, 10ನೇ ಹಾಗೂ ಪಿಯುಸಿ ತರಗತಿ ಆರಂಭಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಶೇಕಡಾ 2 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕಿನಲ್ಲಿ ಕೊರೋನಾ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆ-ಕಾಲೇಜು ಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ಸಭೆಯ ನಂತರ ಹೇಳಿದ್ದಾರೆ.
ಆದರೆ ಯಾವ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇಕಡಾ2 ಕ್ಕಿಂತ ಕಡಿಮೆಯಿದೆ ಎಂಬುದರ ಬಗ್ಗೆ ಶಾಲಾ ಆರಂಭಿಸುವಾಗ ಗಮನಿಸಲು ಸೂಚಿಸಲಾಗಿದೆ.
ಅಚ್ಚರಿ ಎಂಬoತೆ ಶೇಕಡಾ 2ಕ್ಕಿಂತ ಹೆಚ್ಚು ಶಾಲೆ ಮಕ್ಕಳಲ್ಲಿ ಕೊರೊನಾ ವೈರಸ್ ಕಂಡು ಬಂದಲ್ಲಿ ಅಂತಹ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ಬಂದ್ ಮಾಡಿ, ಸ್ಯಾನಿಟೈಸ್ ಮಾಡಿ ಮತ್ತೆ ಆರಂಭಿಸಲು ತಜ್ಞರು ಸರ್ಕಾರಕ್ಕೆ ಸೂಚನೆಯನ್ನು ನೀಡಿದ್ದಾರೆ.
ಶಾಲೆ ಆರಂಭಿಸಿದ ಬಳಿಕ ಶೇ.2 ಕ್ಕಿಂತ ಹೆಚ್ಚು ಪ್ರಕರಣ ವರದಿಯಾದಲ್ಲಿ ಆ ಶಾಲೆಯನ್ನು ಒಂದು ವಾರದ ಕಾಲ ಬಂದ್ ಮಾಡಿ ಸ್ವಚ್ಛಗೊಳಿಸಿದ ನಂತರ ಮತ್ತೆ ತೆರೆಯಲು ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಶಾಲಾ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಆದ್ಯತೆ ಮೇರೆಗೆ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಕೋವಿಡ್ ನಿರ್ವಹಣೆಗೆ ಜಿಲ್ಲಾವಾರು ಯೋಜನೆಗಳನ್ನು ರೂಪಿಸಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದ್ದು, ಆಯಾ ಜಿಲ್ಲೆಗಳ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲೆಯ ಅಗತ್ಯಕ್ಕೆ ತಕ್ಕಂತೆ ಯೋಜನೆ ಹಾಗೂ ಮಾರ್ಗಸೂಚಿಯನ್ನು ರೂಪಿಸಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಕೊರೊನಾ ವೈರಸ್ ಸೋಂಕು ಹೆಚ್ಚಾಗುತ್ತಿರುವ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಹಾಕಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜೊತೆಗೆ ಕೇರಳ ಮತ್ತು ಮಹಾರಾಷ್ಟ್ರ ಗಡಿ ಭಾಗದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿರುವ ರಾಜ್ಯದ ಹಳ್ಳಿಗಳಲ್ಲಿ ಲಸಿಕೆ ನೀಡುವುದನ್ನು ತೀವ್ರಗೊಳಿಸಲು ಹಾಗೂ ಪರೀಕ್ಷಾ ಪ್ರಮಾಣವನ್ನು ಹೆಚ್ಚಿಸಲು ಸಭೆಯಲ್ಲಿ ನಿರ್ಧಾರ ತೆಗೆದುಕೊಂಡು ಅಧಿಕಾರಿಗಳಿಗೆ ಸೂಚಿನೆಯನ್ನು ಕೊಡಲಾಗಿದೆ.
ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ್, ಕೊಪ್ಪಳ, ಹಾವೇರಿ, ವಿಜಯಪುರ, ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೋವಿಡ್ ಪರಿಕ್ಷಾ ಪ್ರಮಾಣವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಮುಂದಿನ ಎರಡು ವಾರದಲ್ಲಿ ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ, ಹುಬ್ಬಳ್ಳಿಗಳಲ್ಲಿ ಆರು ಜಿನೋಮ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲು ಸೂಚಿಸಲಾಗಿದೆ. ಡೆಲ್ಟಾ ವೇರಿಯೆಂಟ್ ವೈರಸ್ ಅಧ್ಯಯನ ಹಾಗೂ ಇತರ ವೇರಿಯೆಂಟ್ ಗಳನ್ನು ಪತ್ತೆ ಹಚ್ಚಲು ಇದರಿಂದ ಅನುಕೂಲವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಇಂದಿನ ವರೆಗೆ ಸುಮಾರು 4 ಕೋಟಿ ಲಸಿಕೆ ಹಾಕಲಾಗಿದೆ. 14.89 ಲಕ್ಷ ಡೋಸ್ ಲಸಿಕೆ ಲಭ್ಯವಿದೆ. ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಹಂಚಿಕೆಯಾಗುವ ಲಸಿಕೆ ಡೋಸ್ ಗಳನ್ನು 65 ಲಕ್ಷದಿಂದ 1 ಕೋಟಿಗೆ ಹೆಚ್ಚಿಸುವಂತೆ ಮನವಿಯನ್ನು ಮಾಡಲಾಗುವುದು. ಬೆಂಗಳೂರು ನಗರದಲ್ಲಿ ಕೋವಿಡ್ ನಿರ್ವಹಣೆ ಕುರಿತಂತೆ ಮಕ್ಕಳ ಐಸಿಯು ಬೆಡ್‌ಗಳನ್ನು ಮೀಸಲಿರಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಸದ್ಯ 0.75 ಪಾಸಿಟಿವಿಟಿ ದರ ಇದೆ. ಶೆ. 2 ರಷ್ಟು ಪಾಸಿಟಿವಿಟಿ ದರ ಹಾಗೂ ಶೆ. 4೦ ರಷ್ಟು ಆಕ್ಸಿಜನೇಟೆಡ್ ಬೆಡ್‌ಗೆ ಸೋಂಕಿತರು ದಾಖಲಾದರೆ, ಮುಂದಿನ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಅಧಿಕಾರವನ್ನು ನೀಡಲಾಗಿದೆ.