ಬೆಂಗಳೂರು: ಪ್ರವಾಹ ಪೀಡಿತ ಉತ್ತರಕನ್ನಡ ಜಿಲ್ಲೆಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಭೇಟಿ ನೀಡಿ, ಪರಿಹಾರ ಕಾರ್ಯಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ.
ಇಂದು ಬೆಳಗ್ಗೆ 9.30 ಕ್ಕೆ ಎಚ್ ಎ ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳಿಗೆ ತೆರಳಲಿರುವ ಮುಖ್ಯಮಂತ್ರಿ, ಅಲ್ಲಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಕಾರವಾರ ಮತ್ತು ಅಂಕೋಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಅತಿಯಾದ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರ ಕ್ರಮಗಳ ಪರಿಶೀಲನೆ ಮತ್ತು ಅಲ್ಲಿರುವಂತಹ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ ಎರಡು ಗಂಟೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಕುರಿತಂತೆ ಶಾಸಕರು, ಸಂಸತ್ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅಂಕೋಲಾದಲ್ಲಿರುವ ನಾಡವರ ಸಭಾ ಭವನದಲ್ಲಿ ಚರ್ಚೆ ನಡೆಸಲಿದ್ದಾರೆ.
ನಂತರ ಅಂಕೋಲಾದಿoದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಸ್ತೆ ಮೂಲಕ ಆಗಮಿಸಿ, ವಿಶೇಷ ವಿಮಾನದ ಮೂಲಕ ಸಂಜೆ 7 ಗಂಟೆಗೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಅಧಿಕೃತ ಪ್ರಕಟಣೆಗಳು ತಿಳಿಸಿದೆ.