ಬೆಂಗಳೂರು: ರಾಜ್ಯದಲ್ಲಿ ಕೆಲ ಜಿಲ್ಲೆಗಳಲ್ಲಿ ಮಳೆಯ ಅರ್ಭಟ ಮುಂದುವರೆದಿದ್ದು, ಮಲೆನಾಡು, ಕರಾವಳಿ ಭಾಗಗಳಲ್ಲಿ ಗುರುವಾರ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಗುರುವಾರದಿಂದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾದರೆ, ರಾಜ್ಯದ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಹಾಗೂ ಮಲೆನಾಡು ಭಾಗವಾಗಿರುವ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿಯನ್ನು ನೀಡಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಗುಡುಗು, ಗಾಳಿ ಸಹಿತ ಭಾರಿ ಮಳೆ ನಿರೀಕ್ಷೆಯಿರುವುದರಿಂದ ನಾಳೆ ಮತ್ತು ನಾಡಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ವರದಿಯನ್ನು ನೀಡಿದೆ.