ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ ಆಟೋರಿಕ್ಷಾಕ್ಕಾಗಿ ಕಾದು ಕುಳಿತ ರೈತ ಮಹಿಳೆಯರ ಮೇಲೆ ಟ್ರಕ್ ಹರಿದು ಸಾವನಪ್ಪಿದ ಘಟನೆ ಹರಿಯಾಣ – ದೆಹಲಿ ಗಡಿಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯರು ಪಂಜಾಬ್ ನ ಮನ್ಸಾ ಜಿಲ್ಲೆಗೆ ಸೇರಿದವರು ಎಂದು ತಿಳಿಬಂದಿದೆ. ಉತ್ತರ ಪ್ರದೇಶ ಲಖೀಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕಾರು ಹರಿಸಿದ ಘಟನೆ ಮಾಸುವ ಮೊದಲೇ ಅಂಥದ್ದೇ ಮತ್ತೊಂದು ಘಟನೆ ಜರುಗಿದ್ದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳದಲ್ಲಿ ಡಿವೈಡರ್ ಮೇಲೆ ಕುಳಿತ ಮೂವರು ಮಹಿಳೆಯರ ಮೇಲೆ ಟ್ರಕ್ ಹರಿದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಸಾವನಪ್ಪಿದ್ದು ತೀವ್ರವಾಗಿ ಗಾಯಗೊಂಡ ಓರ್ವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಘಟನೆ ನಡೆದ ನಂತರ ಟ್ರಕ್ ನನ್ನು ಅಲ್ಲೇ ಬಿಟ್ಟು ಚಾಲಕ ಅಲ್ಲಿಂದ ಪರಾರಿಯಾಗಿದ್ದಾರೆ ಅವರಿಗಾಗಿ ತನಿಖೆ ಮುಂದುವರೆಸಿರುವುದಾಗಿ ಪೊಲೀಸರು ಸುದ್ದಿಗಾರರಿಗೆ ಮಾಹಿತಿಯನ್ನು ನೀಡಿದರು.
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆಯ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ಕಳೆದ 2020ರ ನವೆಂಬರ್.26ರಿಂದ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.