ಬೆಂಗಳೂರು: ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ ಆ.5 ರಂದು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ರಾಜ್ಯದ ಆಮ್ ಆದ್ಮಿ ಪಕ್ಷದ ನಾಯಕರು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಆಮ್ ಆದ್ಮಿ ಪಕ್ಷದ ರಾಜಕೀಯ ಚಟುವಟಿಕೆ ವಿಭಾಗದ ಮುಖ್ಯಸ್ಥ ಎಸ್.ವಿ.ಫಣಿರಾಜ್ ಅವರು, ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿಯನ್ನು ತೀವ್ರವಾಗಿ ಖಂಡಿಸಿ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಆಗಸ್ಟ್ 5 ರಂದು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಹಾಗೂ ಬೆಂಗಳೂರಿನಲ್ಲಿ ಈಗಾಗಲೇ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು, ಭವಿಷ್ಯದಲ್ಲಿ ಭಾರೀ ತೊಂದರೆ ಎದುರಾಗುವ ಸಾಧ್ಯತೆಯಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಆದ್ದರಿಂದ ಮೇಕೆದಾಟು ಯೋಜನೆ ಶೀಘ್ರದಲ್ಲೇ ಪೂರ್ಣಗೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಹಿಂದೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಧಿಕಾರದಲ್ಲಿದ್ದಾಗ ಕುಂಟು ನೆಪ ಹೇಳಿಕೊಂಡು ಈ ಯೋಜನೆಯನ್ನು ಮುಂದೂಡಿ, ಜನರನ್ನು ವಂಚಿಸಿದೆ. ಈಗಿನ “ಡಬಲ್ ಎಂಜಿನ್” ಬಿಜೆಪಿ ಸರ್ಕಾರ ಕೂಡ ವಿಳಂಬ ನೀತಿಯನ್ನು ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಭವಿಷ್ಯದ ದೃಷ್ಟಿಯಿಂದ ಮೇಕೆದಾಟು ಯೋಜನೆ ಅನಿವಾರ್ಯವಾಗಿದೆ. ಒಂದು ವರ್ಷದೊಳಗೆ ಈ ಯೋಜನೆಯನ್ನು ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತದೆ.
12 ತಿಂಗಳ ಡೆಡ್‌ಲೈಟ್ ಇಟ್ಟುಕೊಂಡು ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ನಮ್ಮ ನಾಡಿನ ಒಳಿತಿಗಾಗಿ ನಡೆಯುತ್ತಿರುವ ಹೋರಾಟವನ್ನು ರಾಜ್ಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಬೇಕು ಎಂದು ಮನವಿಯನ್ನು ಮಾಡಿಕೊಂಡಿದ್ದಾರೆ.