ಬೆಂಗಳೂರು: ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಸೂಚನೆ ನೀಡಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತಹ ಮುಖ್ಯಮಂತ್ರಿಗಳು, ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಂತೆಯೇ ಕೋವಿಡ್-19 ಪರಿಸ್ಥಿತಿ ಕುರಿತು ಗಡಿ ಜಿಲ್ಲೆಯ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಾಗುತ್ತದೆ. ಈ ವೇಳೆ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಈಗಾಗಲೇ ರಾಜ್ಯದ ಗಡಿ ಪ್ರದೇಶಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಲಾಗಿದೆ. ಕೊರೋನಾ ಪರೀಕ್ಷೆ ಹಾಗೂ ಲಸಿಕೆ ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ನಮ್ಮ ಸದ್ಯದ ಆದ್ಯತೆ ಕೊರೋನಾ ಸೋಂಕಿನ ಹರಡುವಿಕೆಯನ್ನು ತಡೆಯುವುದಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಕೂಡ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಗಡಿ ಜಿಲ್ಲೆಗಳಾದ ದಕ್ಷಿಣಕನ್ನಡಜಿಲ್ಲೆ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು
ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಕೇರಳದ ಬಳಿಕ ಕರ್ನಾಟಕ ಮತ್ತು ತಮಿಳುನಾಡಿನಲ್ಲೂ ಸಹ ಗುರುವಾರ ಹೊಸ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳವನ್ನು ದಾಖಲಿಸಿದೆ.
ಶುಕ್ರವಾರದಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಗಡಿ ಜಿಲ್ಲೆಗಳ ಆಯುಕ್ತರೊಂದಿಗೆ ಮಾತುಕತೆ ನಡೆಸಿದ್ದ ಸಿಎಂ ಬೊಮ್ಮಾಯಿಯವರು, ಕೋವಿಡ್ ಪರಿಸ್ಥಿತಿ ಕುರಿತಂತೆ ಮಾಹಿತಿ ಪಡೆದುಕೊಂಡರು. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಜಿಲ್ಲೆಗಳ ಉಪ ಆಯುಕ್ತರೊಂದಿಗೆ ವಿಡಿಯೋ ಸಂವಾದ ನಡೆಸಿದ್ದಾರೆಂದು ತಿಳಿದುಬಂದಿದೆ.
ಆರೋಗ್ಯ ಆಯುಕ್ತ ಡಾ.ಕೆ.ವಿ.ತ್ರಿಲೋಕ್ ಚಂದ್ರ ರವರು ಮಾತನಾಡಿ, ಪ್ರತಿನಿತ್ಯ 1.5 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇಯಿದ್ದರೆ, ಪರೀಕ್ಷೆಗಳ ಸಂಖ್ಯೆಯನ್ನು ಮತ್ತಷ್ಟು ಏರಿಕೆ ಮಾಡಲಾಗುತ್ತದೆ. ಕೇರಳದಿಂದ ರಾಜ್ಯಕ್ಕೆ ಬರುವ ಜನರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ನೀಡುವಂತೆ ಸೂಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಈ ನಡುವೆ ಬಿಬಿಎಂಪಿ, ಮುಖ್ಯ ಆಯುಕ್ತರು ಹಾಗೂ ಉಪ ಆಯುಕ್ತರಿಗೆ ಸೂಚನೆ ನೀಡಿರುವ ರಾಜ್ಯ ಸರ್ಕಾರ, ತಮ್ಮ ವ್ಯಾಪ್ತಿಯಲ್ಲಿನ ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಂತೆ ಸೂಚನೆ ನೀಡಿದೆ.
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಅವರು ಕೆಲವು ದಿನಗಳಿಂದ ರಾಜ್ಯದ ಕೆಲವು ಪ್ರದೇಶಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದೆ. ನೆರೆಯ ರಾಜ್ಯಗಳ ಗಡಿ ಭಾಗಗಳಲ್ಲೂ ಸೋಂಕು ಹರಡುತ್ತಿದೆ. ಸ್ಥಳೀಯವಾಗಿ ಪರಿಸ್ಥಿತಿ ಅವಲೋಕಿಸಿ, ಬಿಗಿಯಾದ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕಿದೆ. ಪರೀಕ್ಷೆ, ಸೋಂಕಿತರನ್ನು ಪ್ರತ್ಯೇಕಿಸಿ ಅವರಿಗೆ ಸೂಕ್ತ ಚಿಕಿತ್ಸೆ ನೀಡಲು ಒತ್ತು ನೀಡಬೇಕು. ಹಾಗೂ ಕೋವಿಡ್ ಲಸಿಕೆ ನೀಡುವುದನ್ನು ಆದ್ಯತೆಯ ಕೆಲಸವನ್ನಾಗಿ ಮಾಡಬೇಕು ಎಂದು ಆದೇಶವನ್ನು ಹೊರಡಿಸಿದ್ದಾರೆ,