ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮಂಗಳವಾರ ನಡೆದಂತಹ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಯವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ ನಂತರ ಹಂಗಾಮಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಐವರು ನಾಯಕರ ಜೊತೆ ನಿಯೋಜಿತ ಸಿಎಂ ಬೊಮ್ಮಾಯಿ ರಾಜಭವನಕ್ಕೆ ಆಗಮಿಸಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ನೂತನ ಸರ್ಕಾರ ರಚನೆಗೆ ಅವಕಾಶವನ್ನು ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಗೆ ಮನವಿ ಮಾಡಲಾಗಿದ್ದು, ಸರ್ಕಾರ ರಚನೆಗೆ ರಾಜ್ಯಪಾಲ ಗೆಹ್ಲೋಟ್ ಒಪ್ಪಿಗೆ ನೀಡಿದ್ದಾರೆ.
ಅದರಂತೆ ಇಂದು ಬೆಳಗ್ಗೆ 11 ಗಂಟೆಗೆ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದ 30 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನೂತನ ಸಿಎಂ ಆಗಿ ಆಯ್ಕೆ ಮಾಡಿದ್ದಕ್ಕಾಗಿ ಬಸವರಾಜ ಬೊಮ್ಮಾಯಿಯವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾಗೆ ತಮ್ಮ ಧನ್ಯವಾದವನ್ನು ತಿಳಿಸಿದ್ದಾರೆ. ನನ್ನನ್ನು ನಂಬಿ ನನ್ನ ಹೆಸರನ್ನು ಸೂಚಿಸಿ ಬಿ.ಎಸ್ ಯಡಿಯೂರಪ್ಪನವರು ಆಶೀರ್ವಾದ ಮಾಡಿದ್ದಾರೆ.
ನನ್ನನ್ನು ಮುಖ್ಯಮಂತ್ರಿಯಾಗಿ ಆರಿಸಿದಂತಹ ಪಕ್ಷದ ಎಲ್ಲಾ ಶಾಸಕರಿಗೆ ಹೃದಯಪೂರ್ವಕ ಧನ್ಯವಾದಗಳು. ಪಕ್ಷದ ನಾಯಕರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ರಾಜ್ಯವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುತ್ತೇನೆ. ಕೊವಿಡ್ ನಿಯಂತ್ರಿಸಲು ಹಗಲಿರುಳು ಶ್ರಮಿಸುತ್ತೇನೆ ಎಂದು ಹೇಳಿದರು.