ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬುಧವಾರ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಪರಿಶಿಷ್ಟ ಪಂಗಡದ ಕುಂದುಕೊರತೆಯನ್ನು ಪರಿಹರಿಸಲು ಪ್ರತ್ಯೇಕ ಸಚಿವಾಲಯದ ಸ್ಥಾಪನೆಗೆ ಅನುಮೋದನೆಯನ್ನು ನೀಡಿದೆ.
ಇತ್ತೀಚಿನ ಪ್ರವಾಹ ಮತ್ತು ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯ ಹಿನ್ನೆಲೆಯಲ್ಲಿ ತಮ್ಮ ನೂತನ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಪ್ರಮಾಣವಚನ ಸ್ವೀಕರಿಸಿದ ಕೆಲವು ಗಂಟೆಗಳಲ್ಲೇ ಜಿಲ್ಲಾ ಉಸ್ತುವಾರಿ ನೀಡಿದ್ದ ಬೊಮ್ಮಾಯಿ ಅವರು, ಎರಡು-ಮೂರು ದಿನಗಳಲ್ಲಿ ನೂತನ ಸಚಿವರಿಗೆ ಖಾತೆಯನ್ನು ಹಂಚಿಕೆ ಮಾಡುವುದಾಗಿ ಹೇಳಿದ್ದಾರೆ.
ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ ನಂತರ ಕೋವಿಡ್ -19ರ ಟಾಸ್ಕ್ ಫೋರ್ಸ್ ಅನ್ನು ಪುನರ್ರಚಿಸಲಾಗುವುದು ಎಂದು ಬೊಮ್ಮಾಯಿಯವರು ತಿಳಿಸಿದ್ದಾರೆ.
ಬೊಮ್ಮಾಯಿ ಸಂಪುಟದ ಮೊದಲ ಸಭೆಯು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.
ಈ ವಿಷಯದ ಕುರಿತು ಪ್ರತಿಕ್ರಿಯಿಸಿದ ಸಚಿವ ಬಿ ಶ್ರೀರಾಮುಲು ಅವರು, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರು ವಿಶೇಷ ಸಚಿವಾಲಯ ಸ್ಥಾಪಿಸುವ ಮೂಲಕ ಮಾದರಿಯಾಗಿದ್ದರು. ಸಮುದಾಯದ ಒಟ್ಟಾರೆ ಅಭಿವೃದ್ಧಿಗೆ ಒತ್ತು ನೀಡುವುದರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅದನ್ನು ಮುಂದುವರಿಸಿದ್ದಾರೆ.
ಕರ್ನಾಟಕದಲ್ಲಿ ನಾವು ಅವರ ಹೆಜ್ಜೆಗಳನ್ನು ಅನುಸರಿಸಿದ್ದೇವೆ ಮತ್ತು ನಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್‌ಟಿಗಳ ಕಲ್ಯಾಣಕ್ಕಾಗಿ ವಿಶೇಷ ಕಾರ್ಯಾಲಯವನ್ನು ಸ್ಥಾಪಿಸುವ ಕುರಿತು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಆದ್ಯತೆಯ ಮೇರೆಗೆ ನಮ್ಮ ವಿನಂತಿಯನ್ನು ಸ್ವೀಕರಿಸಿದ ನಮ್ಮ ಹಿಂದಿನ ಸಿಎಂ ಆಗಿದ್ದಂತಹ ಬಿ ಎಸ್ ಯಡಿಯೂರಪ್ಪ ಅವರಿಗೆ ನಾನು ಧನ್ಯವಾದವನ್ನು ಅರ್ಪಿಸುತ್ತೇನೆ ಎಂದ ಶ್ರೀರಾಮುಲು ತಿಳಿಸಿದ್ದಾರೆ.