ಕೊಪ್ಪಳ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿ ಹಾಗೂ ಡ್ರಗ್ ಪೆಡ್ಲರ್ ಎಂದು ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಕೊಪ್ಪಳದ ಕಾಂಗ್ರೆಸ್ ಮಹಿಳಾ ಘಟಕದ ಸದಸ್ಯರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಿದ್ದಾರೆ.
ಕಾಂಗ್ರೆಸ್ ನಾಯಕನ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನೀಡಿರುವ ನಳೀನ್ ಕುಮಾರ್ ಕಟೀಲ್ ಗೆ ನಿಮ್ಮ ಹೊಲಸು ಬಾಯಿಯನ್ನು ತೊಳೆದುಕೊಳ್ಳಿ ಎಂದು ಕಾಂಗ್ರೆಸ್ ಮಹಿಳಾ ಘಟಕದ ಸದಸ್ಯೆಯರು ಕೊಪ್ಪಳ ಅಂಚೆಕಚೇರಿಯ ಮೂಲಕ ಫಿನಾಯಿಲ್ ಬಾಟಲಿಯನ್ನು ಕಳುಹಿಸಿಕೊಟ್ಟಿದ್ದಾರೆ.
ಮಂಗಳವಾರ ಹುಬ್ಬಳ್ಳಿಯಲ್ಲಿ ನಡೆದಂತಹ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರವರು, ರಾಹುಲ್ ಗಾಂಧಿ ಒಬ್ಬ ಮಾದಕ ದ್ರವ್ಯ ವ್ಯಸನಿ ಹಾಗೂ ಡ್ರಗ್ ಪೆಡ್ಲರ್ ಆಗಿದ್ದಾರೆ. ಹೀಗಿರುವಾಗ ಅವರು ದೇಶವನ್ನು ಹೇಗೆ ಮುನ್ನಡೆಸುತ್ತಾರೆ ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಹಲವೆಡೆ ಪ್ರತಿಭಟನೆಯನ್ನು ನಡೆಸಿದ್ದಾರೆ.